Sunday, November 16, 2014

ನಮ್ಮಲ್ಲಿನ ಸ್ಥಳ ಪುರಾಣಗಳು (Mythes) - 36

ಬಸವನಗುಡಿ (Basavanagudi)




ಬೆಂಗಳೂರು ಮಹಾನಗರದಲ್ಲಿನ ಅತ್ಯಂತ ಹಳೆಯ ಬಡಾವಣೆಗಳಲ್ಲಿ ಒಂದು ಬಸವನಗುಡಿ. ಇಂದಿನ ಐಟಿ ಬಿಟಿ ಜಮಾನದಲ್ಲಿಯೂ ಕನ್ನಡತನದೊಡನೆ ನಮ್ಮ ನೆಲದ ಸಂಸ್ಕೃತಿಯನ್ನು ಇನ್ನೂ ಉಳಿಸಿಕೊಂಡು ಬಂದಿರುವ ಈ ಬಡಾವಣೆ ಸಂಪ್ರದಾಯ ಹಾಗೂ ಆಧುನಿಕತೆಯ ಮಿಶ್ರಣವಾಗಿದೆ. ಇಲ್ಲಿನ ದೊಡ್ಡ ಬಸವನ ದೇವಾಲಯವು ಪ್ರಾಚೀನವೂ, ಸುಂದರವೂ ಆಗಿದ್ದು ಇದರಿಂದಾಗಿಯೇ ಈ ಬಡಾವಣೆಗೆ ಬಸವನಗುಡಿ ಎಂಬ ಹೆಸರು ಬಂದಿರುತ್ತದೆ. ದೇವಾಲಯದಲ್ಲಿ 15 ಅಡಿ ಎತ್ತರ 20 ಅಡಿ ಉದ್ದದ ದೊಡ್ಡ ಬಸವಣ್ಣನ ವಿಗ್ರಹವಿದೆ. ಇಲ್ಲಿ ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ನಡೆವ ಕಡಲೇಕಾಯಿ ಪರಿಷೆ ಎನ್ನುವ ದೊಡ್ಡ ಜಾತ್ರೆಯು ಬೆಂಗಳೂರಿಗರಿಗೆಲ್ಲಾ ಗ್ರಾಮೀಣ ಜಾತ್ರೆಯ ಸೊಗಸನ್ನು ಸವಿಯುವ ಅವಕಾಶವನ್ನು ನೀಡುತ್ತದೆ.
ದೊಡ್ಡ ಬಸವನ  ದೇವಾಲಯ. ಎತ್ತರದ ಗುಡ್ಡದ ಮೇಲೆ ಕಟ್ಟಲಾಗಿದೆ.  ದೇವಾಲಯವನ್ನು ಕೆಂಪೇಗೌಡರು 1537ರಲ್ಲಿ ಕಟ್ಟಿಸಿದರು. ದೇವಾಲಯದ ಮುಂದೆ ಸುಂದರವಾದ ದ್ವಜಸ್ತಂಭವಿದೆ. ಈ ಕಲ್ಲು ಕಂಬದಲ್ಲಿ ತಂತಿ ವಾದ್ಯ ನುಡಿಸುತ್ತಿರುವ ಸ್ತ್ರೀ ಮೊದಲಾದ ಉಬ್ಬು ಶಿಲ್ಪಗಳಿವೆ. ದೇವಾಲಯಕ್ಕೆ ಭವ್ಯವಾದ ಗೋಪುರವಿದ್ದು, ಒಳ ಪ್ರಾಕಾರದಲ್ಲಿಯೂ ವಿಶಾಲವಾದ ಗುಡಿ, ಪ್ರಥಕ್ಷಿಣ ಪಥವಿದೆ. ಬಾಗಿಲಲ್ಲಿ ದ್ವಾರಪಾಲಕರ ಶಿಲ್ಪಗಳಿವೆ. ಈ ಗರ್ಭಗೃಹದಲ್ಲಿರುವ ಕಪ್ಪು ಶಿಲೆಯ ಬಸವ ಉದ್ಭವಮೂರ್ತಿಯೆಂದು ಹೇಳುತ್ತಾರೆ.
 ***      
ಈಗ ಬಸವಣ್ಣನ ದೇವಸ್ಥಾನ ಇರುವ ಸ್ಥಳ ಹಿಂದೆ ಸುಂಕೇನ ಹಳ್ಳಿ ಎಂದು ಹೆಸರಾಗಿತ್ತು. ಇಲ್ಲಿ ಹೊಲ ಗದ್ದೆಗಳಿದ್ದವು. ರೈತಾಪಿವರ್ಗದ ಜನ ಇಲ್ಲಿ ವಾಸಿಸುತ್ತಿದ್ದರು. ಇವರು ಪ್ರಧಾನವಾಗಿ ತಮ್ಮ ಹೊಲಗಳಲ್ಲಿ ಕಡಲೇ ಕಾಯಿ ಬೆಳೆಯುತ್ತಿದ್ದರು. ಸರ್ವರಿಗು ಸಮಪಾಲುಸರ್ವರದು ಸಹಬಾಳ್ವೆ ಎಂದು ಬದುಕುತ್ತಿದ್ದ ಆ ರೈತಾಪಿ ವರ್ಗಕಡಲೆಕಾಯಿ ಫಸಲು ಬರುವ ಕಾರ್ತೀಕದಲ್ಲಿ ತಾವು ಬೆಳೆದ ಕಡಲೆಕಾಯಿಯನ್ನು ರಾಶಿ ಮಾಡಿ ಕಣದ ಪೂಜೆ ಮಾಡಿ ಮಾರನೆ ದಿನ ಸಮನಾಗಿ ಹಂಚಿಕೊಳ್ಳುತ್ತಿದ್ದರು. ಒಮ್ಮೆ ಹೀಗೆ ಕಣ ಮಾಡಿದ್ದ ಸಂದರ್ಭದಲ್ಲಿ ಗೂಳಿಯೊಂದು ಬಂದು ರಾಶಿ ರಾಶಿ ಕಡಲೆಕಾಯಿ ತಿಂದು ಹೋಗುತ್ತಿತ್ತಂತೆ.
ಈ ಗೂಳಿ ಅರ್ಥಾತ್ ಬಸವನ ಕಾಟ ತಾಳಲಾರದೆ ರೈತರು ಒಂದು ದಿನ ರಾತ್ರಿಯಿಡೀ ಕಾದಿದ್ದು ಬಡಿಗೆ ಹಿಡಿದು ಬಸವನ ಬಡಿಯಲು ಕಾದಿದ್ದರಂತೆ. ನಿರೀಕ್ಷೆಯಂತೆ ಬಸವ ಬಂದಕಡಲೆಕಾಯಿ ತಿನ್ನುತ್ತಿದ್ದ. ಇದನ್ನು ನೋಡಿ ಕೋಪಗೊಂಡ ರೈತರುತಾವು ತಂದಿದ್ದ ಬಡಿಗೆ ಹಿಡಿದು ಬಸವನ್ನು ಅಟ್ಟಿಸಿಕೊಂಡು ಹೋದರಂತೆ ಆಗ ರೈತರ ಹೊಡೆತ ತಪ್ಪಿಸಿಕೊಳ್ಳಲೆಂದು ಓಡಿದ ಬಸವ ಸುಂಕೇನಹಳ್ಳಿಯಿಂದ ಸ್ವಲ್ಪದೂರ ಓಡಿಬಂದು ಗುಡ್ಡ ಏರಿ ಕಲ್ಲಾದನಂತೆ . ಈ ಸೋಜಿಗವನ್ನು ಕಣ್ಣಾರೆ ಕಂಡ ರೈತರಿಗೆ ಇದು ಸಾಮಾನ್ಯ ಗೂಳಿಯಲ್ಲ. ಶಿವನ ವಾಹನ ನಂದಿ ಎಂಬ ಸತ್ಯ ತಿಳಿಯಿತಂತೆ. ಕೈಲಾಸದಿಂದ ಧರೆಗಿಳಿದುಬಂದ ನಂದಿಕೇಶ್ವರನನ್ನೇ ಹೊಡೆದು ಎಂಥ ತಪ್ಪು ಮಾಡಿದೆವೆಂದು ಮರುಗಿದರಂತೆ. ಅರಿಯದೆ ತಾವು ಮಾಡಿದ ತಪ್ಪು ಮನ್ನಿಸೆಂದು ಪರಿಪರಿಯಾಗಿ ಬೇಡಿದರಂತೆ. ಅಂದಿನಿಂದ ರೈತರು ತಪ್ಪೊಪ್ಪಿಗೆಯಾಗಿ ಪ್ರತಿವರ್ಷ ಕಡಲೆಕಾಯಿ ಬೆಳೆ ಬಂದ ತತ್‌ಕ್ಷಣ ತಮ್ಮ ಮೊದಲ ಬೆಳೆಯನ್ನು ಈ ಕಲ್ಲಿನ ಬಸವಣ್ಣನಿಗೆ ತಂದು ಒಪ್ಪಿಸಿ ನೇವೇದ್ಯ ಮಾಡಿಕ್ಷಮಿಸೆಂದು ಕೇಳಿ ನಂತರ ಮಾರಾಟ ಮಾಡುತ್ತಿದ್ದರಂತೆ. ಇಂದಿಗೂ ಈ ಪರಂಪರೆ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಪ್ರತಿವರ್ಷ ಕಾರ್ತೀಕ ಮಾಸದಲ್ಲಿ ನಡೆಯುವ ಜಾತ್ರೆ ಕಡಲೆಕಾಯಿ ಪರಿಷೆ ಎಂದೇ ಖ್ಯಾತವಾಗಿದೆ.




No comments:

Post a Comment